ರಾಯಚೂರು:- ನಗರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಬಳಕೆ, ಅಕ್ರಮ ಮದ್ಯ ಮಾರಾಟ ಹಾಗೂ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಯುವಜನರನ್ನು ದುಶ್ಚಟಗಳಿಂದ ದೂರವಿಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಒತ್ತಾಯಿಸಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಯುವ ಮೋರ್ಚಾ ಮುಖಂಡರು, ನಗರದಲ್ಲಿ ಮಾದಕ ಪದಾರ್ಥಗಳ ಬಳಕೆ ಹಾಗೂ ಅಕ್ರಮ ಚಟುವಟಿಕೆಗಳು ಯುವಜನರ ಮೇಲೆ ದುಷ್ಪರಿಣಾಮ ಬೀರುವ ಆತಂಕವಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಹಾಗೂ ನಗರದ ಶಾಂತಿ, ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ನಗರದ ವಿವಿಧ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸುವುದು, ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯ ಕುರಿತು ನಿರಂತರ ನಿಗಾ ವಹಿಸುವುದು ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಯುವಜನರಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಲು ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ.
PublicNext
27/10/2026 08:11 am
LOADING...