ಗೌರಿಬಿದನೂರು: ನಗರದ ಗಾಂಧಿ ವೃತ್ತದ ಸಮೀಪ ಹಿರಿಯ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ (65) ಅವರ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಮಂಗಳವಾರ ಬೆಳಿಗ್ಗೆ ಚಾಕುವಿನಿಂದ ಮಾರಣಾಂತಿಕ ದಾಳಿ ನಡೆಸಿದ್ದಾನೆ.
ಕಸಬಾ ಗ್ರಾಮೀಣ ಕೃಷಿ ಸಹಕಾರ ಸಂಘದ ಕಟ್ಟಡದಲ್ಲಿರುವ ತಮ್ಮ ಖಾಸಗಿ ಕಚೇರಿಗೆ ವಕೀಲರು ಬರುತ್ತಿದ್ದ ಸಂದರ್ಭದಲ್ಲಿ, ಕಟ್ಟಡದ ಮಹಡಿಯ ಬಳಿ ಅವಿತು ಕುಳಿತಿದ್ದ ದುಷ್ಕರ್ಮಿ ಏಕಾಏಕಿ ದಾಳಿ ನಡೆಸಿ ಕುತ್ತಿಗೆ ಮತ್ತು ತಲೆಯ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ತೀವ್ರವಾಗಿ ಗಾಯಗೊಂಡು ರಕ್ತಸ್ರಾವವಾಗುತ್ತಿದ್ದ ವಕೀಲರನ್ನು ಸ್ಥಳೀಯರು ತಕ್ಷಣ ಸಮೀಪದ ಮಾನಸ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಸುಮಾರು ಮೂರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ರಕ್ತಸ್ರಾವವನ್ನು ನಿಯಂತ್ರಿಸಿದ್ದಾರೆ. ಅತಿಯಾದ ರಕ್ತನಷ್ಟದಿಂದ ಅವರ ಸ್ಥಿತಿ ಗಂಭೀರವಾಗಿದ್ದು, ಸದ್ಯ ಸ್ಥಿರವಾಗಿದೆ. ಮುಂದಿನ 48 ಗಂಟೆಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ದುಷ್ಕರ್ಮಿ ಹೋಂಡಾ ಡಿಯೋ ದ್ವಿಚಕ್ರ ವಾಹನದಲ್ಲಿ ಬಂದು ವಕೀಲರಿಗಾಗಿ ಕಾಯುತ್ತಿದ್ದ ಎನ್ನಲಾಗಿದೆ. ದಾಳಿಯ ಬಳಿಕ ಚಾಕುವನ್ನು ಸಮೀಪದ ತಾಲೂಕು ಆರೋಗ್ಯ ಇಲಾಖೆಯ ಕಚೇರಿ ಆವರಣದ ಕಡೆಗೆ ಎಸೆದು ಪರಾರಿಯಾಗಿರುವ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ, ಡಿವೈಎಸ್ಪಿ ಜಗನ್ನಾಥ್ ರಾಯ್ ಹಾಗೂ ನಗರ ಠಾಣೆಯ ಪಿಎಸ್‌ಐ ವರಲಕ್ಷ್ಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಆರೋಪಿಯನ್ನು ಪತ್ತೆಹಚ್ಚಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ತಾಂತ್ರಿಕ ಹಾಗೂ ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಲಾಗಿದೆ. ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ನಡೆದ ದಾಳಿಯಿಂದ ವಕೀಲರ ವಲಯ ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಆರೋಪಿಯನ್ನು ಶೀಘ್ರ ಬಂಧಿಸಿ, ದಾಳಿಯ ಹಿಂದಿನ ಕಾರಣವನ್ನು ಬಹಿರಂಗಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ.
ಚಿಕ್ಕತೇಕಹಳ್ಳಿ ಡಿ. ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ
PublicNext
27/10/2026 07:49 pm