ಚಿಕ್ಕಬಳ್ಳಾಪುರ : ಜಿಲ್ಲಾ ಕಾಂಗ್ರೆಸ್‌ನಲ್ಲಿನ ಆಂತರಿಕ ಭಿನ್ನಮತ ಮತ್ತೊಮ್ಮೆ ಬಹಿರಂಗಗೊಂಡಿದೆ. ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಬೆಂಬಲಿಗರ ನಡುವಿನ ಅಸಮಾಧಾನ, ಎಐಸಿಸಿ ವೀಕ್ಷಕರ ಸಮ್ಮುಖದಲ್ಲೇ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡುತ್ತಿಲ್ಲ ಹಾಗೂ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಸುಧಾಕರ್ ಬೆಂಬಲಿಗರು ಸಭೆಯನ್ನು ಬಹಿಷ್ಕರಿಸಿ ಹೊರನಡೆದಿದ್ದಾರೆ.
ಚಿಕ್ಕಬಳ್ಳಾಪುರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಈ ಬೆಳವಣಿಗೆ ನಡೆದಿದೆ. ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಎಐಸಿಸಿ ವೀಕ್ಷಕಿ ದೀಪ್ತಿ ಮೇರಿ ವರ್ಗೀಸ್ ಹಾಗೂ ಇತರ ಕಾಂಗ್ರೆಸ್ ನಾಯಕರ ಎದುರೇ ಸುಧಾಕರ್ ಬೆಂಬಲಿಗರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರ ಗಮನಕ್ಕೂ ಈ ವಿಚಾರವನ್ನು ತಂದಿದ್ದೇವೆ. ಆದರೂ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳದಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.
ಸಭೆಯಲ್ಲಿ ಪ್ರದೀಪ್ ಈಶ್ವರ್ ಮತ್ತು ಸುಧಾಕರ್ ಅವರ ಬೆಂಬಲಿಗರು ಪ್ರತ್ಯೇಕವಾಗಿ ಕುಳಿತಿದ್ದರು. ಇಬ್ಬರು ನಾಯಕರ ಬೆಂಬಲಿಗರ ನಡುವಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಸಭೆಯ ಮೇಲೆ ಮೊದಲಿನಿಂದಲೂ ರಾಜಕೀಯ ಕುತೂಹಲವಿತ್ತು. ಎಐಸಿಸಿ ವೀಕ್ಷಕಿ ಮಾತನಾಡುತ್ತಿದ್ದ ಸಂದರ್ಭದಲ್ಲೇ ಸುಧಾಕರ್ ಬೆಂಬಲಿಗರು ತಮ್ಮ ಆಕ್ಷೇಪಗಳನ್ನು ಮುಂದಿಟ್ಟಿದ್ದರಿಂದ ಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು.
ಪಕ್ಷದ ಸಂಘಟನೆಗಾಗಿ ಶ್ರಮಿಸಿದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬುದು ಸುಧಾಕರ್ ಬೆಂಬಲಿಗರ ಪ್ರಮುಖ ಆರೋಪವಾಗಿದೆ. ಪಕ್ಷಕ್ಕಾಗಿ ದುಡಿದವರಿಗೆ ಜವಾಬ್ದಾರಿ ಮತ್ತು ಹುದ್ದೆಗಳನ್ನು ನೀಡುವ ಬದಲು ಇತರರಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ. ತಮ್ಮ ಅಹವಾಲುಗಳಿಗೆ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಸಭೆಯಿಂದ ಹೊರನಡೆದು ಪ್ರತಿಭಟನಾತ್ಮಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಐಸಿಸಿ ವೀಕ್ಷಕರ ಸಮ್ಮುಖದಲ್ಲೇ ನಡೆದ ಈ ಬೆಳವಣಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ನಲ್ಲಿನ ಆಂತರಿಕ ಭಿನ್ನಮತವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
PublicNext
28/10/2026 08:49 am