ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಪ್ಪಳ: ಕನಕಗಿರಿಯಲ್ಲಿ ಅಕ್ರಮ ಮರಳುಗಾರಿಕೆ ದಂಧೆ, ಪೊಲೀಸ್-ಕಂದಾಯ ಇಲಾಖೆ ಜಂಟಿ ದಾಳಿ, ಕೇಸ್ ದಾಖಲು

ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಒಂದು ವಾರದಿಂದ ವಿವಿಧೆಡೆ ದಾಳಿ ನಡೆಸಿರುವ ಅಧಿಕಾರಿಗಳು, ಐದು ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಅಕ್ರಮ ಮರಳುಗಾರಿಕೆ ವಿರುದ್ಧ ಪೊಲೀಸ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದರೂ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ಇಲ್ಲ ಎನ್ನುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ಟೋಬರ್ 24 ಮತ್ತು 25ರಂದು ಎರಡು ಪ್ರಕರಣಗಳು ದಾಖಲಾಗಿವೆ. ಅಕ್ಟೋಬರ್ 24ರಂದು ಕನಕಗಿರಿ ಪೊಲೀಸ್ ಇನ್‌ಸ್ಪೆಕ್ಟರ್ ಶಿವರಾಜ ಇಂಗಳೆ ನೀಡಿದ ದೂರಿನ ಆಧಾರದ ಮೇಲೆ ಸಂಕನಾಳ ಗ್ರಾಮದ ಪಟ್ಟಾ ಭೂಮಿಯ ಸರ್ವೆ ನಂ.70, 71 ಹಾಗೂ 47ರಲ್ಲಿ ನಡೆಯುತ್ತಿದ್ದ ಎನ್ನಲಾದ ಅಕ್ರಮ ಫಿಲ್ಟರ್ ಮರಳುಗಾರಿಕೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮರಳು ಗಣಿಗಾರಿಕೆಗೆ ಬಳಸಿದ ಇಟಾಚಿ ಹಾಗೂ ಟ್ರ್ಯಾಕ್ಟರ್‌ನ ಚಾಲಕರು ಮತ್ತು ಮಾಲೀಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಲಾಗಿದೆ.

ಇನ್ನು ಅಕ್ಟೋಬರ್ 25ರಂದು ಕಂದಾಯ ನಿರೀಕ್ಷಕ ಹನುಮಂತಪ್ಪ ನೀಡಿದ ದೂರಿನ ಆಧಾರದ ಮೇಲೆ ಕ್ಯಾರಿಹಾಳ ಗ್ರಾಮದ ಸರ್ವೆ ನಂ.58/8ರ ಜಮೀನಿನಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸಿದ ಆರೋಪದಡಿ ಗೋವಿಂದ, ಜಡಿಯಪ್ಪ ಹಾಗೂ ಮಲ್ಲಿಕಾರ್ಜುನ ಎಂಬುವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಈ ಜಮೀನು ದುರುಗಪ್ಪ ಅವರಿಗೆ ಸೇರಿದ್ದೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿರುವ ಮಾಹಿತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವೆಬ್‌ಸೈಟ್‌ನಲ್ಲೂ ಲಭ್ಯವಿದೆ ಎನ್ನಲಾಗಿದೆ. ಆದರೆ, ಈ ಕುರಿತು ಪ್ರತಿಕ್ರಿಯೆ ಕೇಳಿದಾಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ವಿಶ್ವನಾಥ ಅವರು ಮಾಹಿತಿ ಇಲ್ಲ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ, ಇತರ ಇಲಾಖೆಗಳು ನಡೆಸಿದ ದಾಳಿ ಹಾಗೂ ದಾಖಲಾದ ಪ್ರಕರಣಗಳ ಬಗ್ಗೆ ಮಾಹಿತಿ ಇಲ್ಲದಿರುವುದಕ್ಕೆ ಕಾರಣವೇನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಮಾಧ್ಯಮಗಳಿಗೆ ಮಾಹಿತಿ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದು ಕೂಡ ಹಲವು ಅನುಮಾನಗಳಿಗೆ ಕಾರಣವಾಗಿದೆ.

Edited By :
PublicNext

PublicNext

29/10/2026 12:04 pm

Cinque Terre

7.54 K

Cinque Terre

0

ಸಂಬಂಧಿತ ಸುದ್ದಿ