ಬೆಳಗಾವಿ : ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಮಾಜಿ ಸಂಸದ ಶಿವಾನಂದ ಕೌಜಲಗಿ (87) ನಿಧನರಾಗಿದ್ದಾರೆ. ಬೈಲಹೊಂಗಲದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಲಿಂಗೈಕ್ಯರಾಗಿದ್ದಾರೆ.
ಶಿವಾನಂದ ಕೌಜಲಗಿ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಶೋಕ ಆವರಿಸಿದೆ. ತಂದೆಯ ನಿಧನದ ಕುರಿತು ಪುತ್ರ, ಶಾಸಕ ಮಹಾಂತೇಶ ಕೌಜಲಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಬೈಲಹೊಂಗಲ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಿವಾನಂದ ಕೌಜಲಗಿ, 1996ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯ ಸರ್ಕಾರದಲ್ಲಿ ಲೋಕೋಪಯೋಗಿ ಖಾತೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಇದಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿಯೂ ತಮ್ಮದೇ ಆದ ಕೊಡುಗೆ ನೀಡಿದ್ದ ಅವರು, ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ರಾಜಕೀಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದ ಕೌಜಲಗಿ ಅವರ ನಿಧನದಿಂದ ಜಿಲ್ಲೆ ಓರ್ವ ಹಿರಿಯ ನಾಯಕನನ್ನು ಕಳೆದುಕೊಂಡಂತಾಗಿದೆ.
ಶಿವಾನಂದ ಕೌಜಲಗಿ ಅವರ ಅಂತ್ಯಕ್ರಿಯೆಯನ್ನು ಶನಿವಾರ ಬೆಳಿಗ್ಗೆ 11 ಗಂಟೆಗೆ ಬೈಲಹೊಂಗಲ ನಗರದ ಆನಿಗೋಳ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರಿಗೆ ಶಾಸಕ. ಮಹಾಂತೇಶ ಕೌಜಲಗಿ, ಕಾಂಗ್ರೆಸ್ ಮುಖಂಡ ಬಸವರಾಜ ಕೌಜಲಗಿ ಹಾಗೂ ಪುತ್ರಿ ಇದ್ದಾರೆ.
PublicNext
30/10/2026 09:06 am
LOADING...