ಶಿರಹಟ್ಟಿ : ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದರೂ, ಶಿರಹಟ್ಟಿ ಕೇಂದ್ರ ಬಸ್ ನಿಲ್ದಾಣದಲ್ಲಿ ರಾಜ್ಯೋತ್ಸವ ಆಚರಣೆಗೆ ಯಾವುದೇ ವ್ಯವಸ್ಥೆ ಮಾಡದಿರುವುದು ಕನ್ನಡಪರ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಯಿತು. ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ಗೌರವ ಹೊಂದಬೇಕಾದ ಸಾರಿಗೆ ಇಲಾಖೆಯೇ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ ತೋರಿರುವುದು ಖಂಡನೀಯ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲದೆ, ಬಸ್ ನಿಲ್ದಾಣದ ಕಾರ್ಯಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಬಂದ್ ಮಾಡಿದರು.
ಕನ್ನಡಿಗರ ನೆಲದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.
ಈ ಘಟನೆಯಿಂದ ಕೆಲಕಾಲ ಬಸ್ ನಿಲ್ದಾಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
PublicNext
01/11/2026 10:13 pm
LOADING...