ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವ್ಯಾಪ್ತಿಯ ರಂಗನಾಥಪುರ ಗ್ರಾಮದಲ್ಲಿ ಹಲವು ದಿನಗಳಿಂದ ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಸೋಮವಾರ ಬೆಳಗಿನ ಜಾವ ಸುಮಾರು ಏಳು ವರ್ಷ ವಯಸ್ಸಿನ ಗಂಡು ಚಿರತೆ ಬೋನಿನಲ್ಲಿ ಸೆರೆಯಾಗಿದ್ದು, ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಬಂಧನದಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಗ್ರಾಮದ ಸುತ್ತಮುತ್ತಲಿನ ಜಾನುವಾರುಗಳ ಮೇಲೆ ದಾಳಿ ನಡೆಸಿ ರೈತರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಚಿರತೆಯನ್ನು ಸೆರೆಹಿಡಿಯುವ ಉದ್ದೇಶದಿಂದ ಬೋನಿನಲ್ಲಿ ಕರುವನ್ನು ಇರಿಸಿ ಇಲಾಖೆ ರೂಪಿಸಿದ್ದ ತಂತ್ರ ಯಶಸ್ವಿಯಾಗಿದ್ದು, ಚಾಲಾಕಿ ಚಿರತೆ ಕೊನೆಗೂ ಬೋನಿನಲ್ಲಿ ಸಿಕ್ಕಿಬಿದ್ದಿದೆ. ಚಿರತೆ ಸೆರೆ ಸಿಕ್ಕ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಯಾದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತವಾಗಿ ಮೂಲೆಹೊಳೆ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ. ಹಲವು ದಿನಗಳಿಂದ ಗ್ರಾಮಸ್ಥರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿರುವುದರಿಂದ ರಂಗನಾಥಪುರ ಗ್ರಾಮದ ರೈತರು ನಿರಾಳರಾಗಿದ್ದಾರೆ.
PublicNext
03/11/2026 08:54 am
LOADING...