ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣ ಮೊಟಕುಗೊಳ್ಳದಂತೆ ವಿಶೇಷ ನಿಗಾ ವಹಿಸಿ: ಡಾ. ಕುಮಾರ

ಮಂಡ್ಯ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಆರ್ಥಿಕ ಹಾಗೂ ಸಾಮಾಜಿಕ ಕಾರಣಗಳಿಂದ ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಗ್ಯಾರೇಜ್‌ ಸೇರಿದಂತೆ ವಿವಿಧೆಡೆ ಕೆಲಸಕ್ಕೆ ಸೇರುತ್ತಿರುವುದು ಕಂಡುಬಂದಲ್ಲಿ ಅಂತಹ ಮಕ್ಕಳನ್ನು ಗುರುತಿಸಿ ಪುನಃ ಶಾಲೆಗೆ ದಾಖಲಿಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಅಧಿಕಾರಿಗಳು ವಿಶೇಷ ನಿಗಾ ವಹಿಸಿ, ಪೋಷಕರಲ್ಲಿ ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ 2026-27ನೇ ಸಾಲಿನ ಜುಲೈನಿಂದ ಸೆಪ್ಟೆಂಬರ್ 2026ರವರೆಗಿನ ಎರಡನೇ ತ್ರೈಮಾಸಿಕ ಅವಧಿಯಲ್ಲಿ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲೆಗಳಿಗೆ ನಿರಂತರವಾಗಿ ಗೈರುಹಾಜರಾಗುವ ಮಕ್ಕಳನ್ನು ಗುರುತಿಸಿ, ಗೈರುಹಾಜರಿಗೆ ಕಾರಣಗಳನ್ನು ಪತ್ತೆಹಚ್ಚಬೇಕು. ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ವಿಶೇಷ ತರಬೇತಿ ಹಾಗೂ ಪೂರಕ ಬೋಧನಾ ಕ್ರಮಗಳನ್ನು ರೂಪಿಸಬೇಕು. ಮಕ್ಕಳ ಜೊತೆಗೆ ಪೋಷಕರಿಗೂ ಸಮಾಲೋಚನೆ ನಡೆಸಿ, ಶಿಕ್ಷಣದ ಮಹತ್ವ ಹಾಗೂ ಉನ್ನತ ಶಿಕ್ಷಣದಿಂದ ದೊರೆಯುವ ಭವಿಷ್ಯದ ಅವಕಾಶಗಳ ಕುರಿತು ಮನವರಿಕೆ ಮಾಡಿಕೊಡಬೇಕು. ವಿಶೇಷವಾಗಿ 18 ವರ್ಷದೊಳಗಿನ ಮಕ್ಕಳು ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅವರನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರಬೇಕು ಎಂದರು.

ಅಲ್ಪಸಂಖ್ಯಾತ ಸಮುದಾಯದ ಆರ್ಥಿಕ ಸ್ವಾವಲಂಬನೆಗೆ ವಿವಿಧ ಸಾಲ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಲೀಡ್ ಬ್ಯಾಂಕ್ ಅಧಿಕಾರಿಗಳು ಮನೆ ಸಾಲ, ಸ್ವಯಂ ಉದ್ಯೋಗ ಹಾಗೂ ಇತರೆ ಆರ್ಥಿಕ ಚಟುವಟಿಕೆಗಳಿಗೆ ಅಗತ್ಯ ಸಾಲ ಸೌಲಭ್ಯ ಒದಗಿಸಲು ಕ್ರಮವಹಿಸಬೇಕು. ಪಿ.ಎಂ. ಸ್ವನಿಧಿ ಯೋಜನೆಯಡಿ ಅರ್ಹರಿಗೆ ಸಾಲ ಮಂಜೂರು ಮಾಡುವುದರ ಜೊತೆಗೆ ಅವರ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡಿ ಸ್ವಂತ ಉದ್ಯೋಗ ಆರಂಭಿಸಲು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಅಲ್ಪಸಂಖ್ಯಾತ ಸಮುದಾಯದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಎಚ್‌ಪಿವಿ (HPV) ಲಸಿಕೆ ನೀಡುವ ಸಂಬಂಧ ಆರೋಗ್ಯ ಇಲಾಖೆಯು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಲಸಿಕೆ ಸೌಲಭ್ಯ ತಲುಪಿಸುವುದರ ಜೊತೆಗೆ ಮಕ್ಕಳ ಆರೋಗ್ಯ ಸಂರಕ್ಷಣೆಗೆ ಸಂಬಂಧಿಸಿದ ಸರ್ಕಾರಿ ಕಾರ್ಯಕ್ರಮಗಳ ಕುರಿತು ಸಮುದಾಯದಲ್ಲಿ ಅರಿವು ಮೂಡಿಸಬೇಕು ಎಂದರು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಗುಣಮಟ್ಟದ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಉತ್ತಮ ವಾತಾವರಣಕ್ಕೆ ಆದ್ಯತೆ ನೀಡಿ, ಅವರ ವಿದ್ಯಾಭ್ಯಾಸಕ್ಕೆ ಪೂರಕವಾದ ಸೌಲಭ್ಯಗಳನ್ನು ಖಾತರಿಪಡಿಸಬೇಕು. ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಗಾಗಿ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪಿಸುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ಕೋಶದ ಅಧಿಕಾರಿ ಧನುಷ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಧುಶ್ರೀ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಜಿ.ಎಸ್. ಬೆಟ್ಟಸ್ವಾಮಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಸ್ವಾಮಿ ಜಿ.ಎಸ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

03/11/2026 04:48 pm

Cinque Terre

160

Cinque Terre

0

ಸಂಬಂಧಿತ ಸುದ್ದಿ