ಚಿಕ್ಕಮಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ನಡುವೆ ಪರಿಸರ ಸಂರಕ್ಷಣೆಯೂ ನಮ್ಮೆಲ್ಲರ ಹೊಣೆಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಸಿರು ಪಟಾಕಿ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಕಾರಿ ರಾಸಾಯನಿಕಗಳಿಂದ ಉಂಟಾಗುವ ವಾಯುಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ, ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ರಾತ್ರಿ ೮ ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ.
ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿಯ ಹಾನಿಕಾರಕ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಈ ಬಾರಿಯ ದೀಪಾವಳಿ ಹಾಗೂ ಮುಂದಿನ ಯಾವುದೇ ಆಚರಣೆಗಳ ಸಂದರ್ಭದಲ್ಲಿ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಅಥವಾ ಮಾರಾಟ ಮಾಡುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
ಪಟಾಕಿ ಮಾರಾಟಗಾರರು ತಮ್ಮ ಗೋದಾಮುಗಳಲ್ಲಿ ಕಾನೂನುಬಾಹಿರವಾಗಿ ಇಂತಹ ಪಟಾಕಿಗಳನ್ನು ದಾಸ್ತಾನು ಮಾಡಿದ್ದರೆ ಇಡೀ ಗೋದಾಮನ್ನೇ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಾರಿಗೆ ತಂದಿರುವ ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನಿನ ಅಡಿಯಲ್ಲಿ ತೀವ್ರ ಸ್ವರೂಪದ ದಂಡನಾ ಕ್ರಮಗಳನ್ನು ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟ ಎಚ್ಚರಿಕೆ ನೀಡಿದೆ.
Kshetra Samachara
04/11/2026 07:42 pm
LOADING...