ಬೆಳಗಾವಿ: ಕಬ್ಬಿನ ದರ ನಿಗದಿ ವಿಚಾರವಾಗಿ ಸರ್ಕಾರದ ವಿರುದ್ಧ ರೈತರ ಆಕ್ರೋಶ ತೀವ್ರಗೊಂಡಿದ್ದು, ಹೋರಾಟ ಮತ್ತಷ್ಟು ಕಾವು ಪಡೆದುಕೊಂಡಿದೆ. ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯಗೊಂಡರೂ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ರೈತರು ಮತ್ತೆ ಹಿಂಡಲಗಾ ಜೈಲು ಭರೋ ಚಳವಳಿಗೆ ಮುಂದಾಗಿದ್ದಾರೆ.
ಸಕ್ಕರೆಗೆ ಪ್ರತಿ ಕ್ವಿಂಟಾಲ್‌ಗೆ ₹60 ಎಂಎಸ್‌ಪಿ ನಿಗದಿ, ಕಾರ್ಖಾನೆ ಮಾಲೀಕರಿಂದ ಪ್ರತಿ ಟನ್ ಕಬ್ಬಿಗೆ ₹4,500 ಹಾಗೂ ರಾಜ್ಯ ಸರ್ಕಾರದಿಂದ ₹1,000 ಎಸ್‌ಎಪಿ ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಈ ಬೇಡಿಕೆಗಳನ್ನು ಈಡೇರಿಸಲು ರೈತರು ಸರ್ಕಾರಕ್ಕೆ ಬುಧವಾರ ಮಧ್ಯಾಹ್ನದವರೆಗೆ ಗಡುವು ನೀಡಿದ್ದರು. ಆದರೆ ಸರ್ಕಾರದಿಂದ ಯಾವುದೇ ಸ್ಪಷ್ಟ ನಿರ್ಧಾರ ಪ್ರಕಟವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.
ಬಡಕುಂದ್ರಿ ಗ್ರಾಮದ ಹೊಳೆಮ್ಮ ದೇವಸ್ಥಾನದಿಂದ ರೈತರ ಬೃಹತ್ ಪ್ರತಿಭಟನಾ ರ‍್ಯಾಲಿ ಆರಂಭಗೊಂಡಿದೆ. ಬೈಕ್, ಕಾರು ಹಾಗೂ ಟ್ರ್ಯಾಕ್ಟರ್‌ಗಳ ಮೂಲಕ ಸಾವಿರಾರು ರೈತರು ಪ್ರತಿಭಟನಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ಬೆಳಗಾವಿಯ ಹಿಂಡಲಗಾ ಜೈಲಿನತ್ತ ರೈತರು ಸಾಗುತ್ತಿದ್ದಾರೆ. ರ‍್ಯಾಲಿಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಹತ್ತರಗಿ ಟೋಲ್ ಗೇಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಇಂದಿನ ರ‍್ಯಾಲಿ ಬಡಕುಂದ್ರಿಯಿಂದ ಭೂತರಾಮನಮಟ್ಟದ ಮುಕ್ತಿ ಮಠದವರೆಗೆ ಸಾಗಲಿದೆ. ಅಲ್ಲಿಯೇ ರೈತರು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಗುರುವಾರ ಬೆಳಗ್ಗೆ ಮುಕ್ತಿ ಮಠದಿಂದ ಮತ್ತೆ ಪ್ರತಿಭಟನಾ ಯಾತ್ರೆ ಆರಂಭಿಸಿ ಬೆಳಗಾವಿ ತಲುಪಲು ಹೋರಾಟಗಾರರು ನಿರ್ಧರಿಸಿದ್ದಾರೆ. ಕಬ್ಬಿನ ದರದ ವಿಚಾರದಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಬೇಡಿಕೆ ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ರೈತರು ನೀಡಿದ್ದಾರೆ.
PublicNext
04/11/2026 08:23 pm
LOADING...