ಉಡುಪಿ: ಸಹಕಾರ ಸಂಘಗಳು ಜನರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವುದರ ಜತೆಗೆ ಗ್ರಾಹಕರ ನೋವು–ನಲಿವಿಗೆ ಸ್ಪಂದಿಸುತ್ತಿವೆ. ದಕ್ಷ ಆಡಳಿತ ಮಂಡಳಿ ಹಾಗೂ ಪ್ರಾಮಾಣಿಕ ಸಿಬ್ಬಂದಿಯ ಸೇವೆಯಿಂದ ಸಹಕಾರಿ ಸಂಸ್ಥೆಗಳು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಬೆಳೆದಿದ್ದು, ಉತ್ತಮ ಸೇವೆ ಒದಗಿಸುತ್ತಿವೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಶಶಿಕುಮಾರ್ ರೈ ಬಿ. ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ಕಡಿಯಾಳಿಯ ಓಷ್ಯನ್ ಪರ್ಲ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಬ್ಸಿಡಿ, ಸಾಲಮನ್ನಾದಂತಹ ಯೋಜನೆಗಳನ್ನು ಸಹಕಾರಿ ಸಂಸ್ಥೆಗಳು ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿವೆ. ಸಾಲಕ್ಕಾಗಿ ಬರುವವರಿಗೆ ಅನಗತ್ಯ ತೊಂದರೆ ನೀಡದೆ, ಅವರ ಬೇಡಿಕೆಗಳಿಗೆ ಸ್ಪಂದಿಸುವುದು ಸಹಕಾರಿ ಸಂಸ್ಥೆಗಳ ಪ್ರಮುಖ ಗುಣವಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಸರ್ಕಾರ ಹೊಸ ಕಾಯಿದೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಅವುಗಳ ಬಗ್ಗೆ ತ್ವರಿತವಾಗಿ ಅರಿತುಕೊಂಡು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ಸಂಸ್ಥೆಗಳ ಮೇಲಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ಬದ್ಧತೆ ಅತ್ಯಗತ್ಯ. ಸಹಕಾರಿ ಸಂಘಗಳು ಹಾಗೂ ಬ್ಯಾಂಕ್‌ಗಳು ಜನರನ್ನು ವೇಗವಾಗಿ ತಲುಪುತ್ತಿವೆ. ಉಡುಪಿ ಜಿಲ್ಲೆಯ ಸಹಕಾರಿ ಕ್ಷೇತ್ರ ಸದೃಢವಾಗಿ, ಸ್ವತಂತ್ರವಾಗಿ ಹಾಗೂ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ದೇಶದ ಸಹಕಾರಿ ಕ್ಷೇತ್ರದ ಕಾಯಿದೆಗಳಲ್ಲಿ ಸಾಕಷ್ಟು ತಿದ್ದುಪಡಿಗಳಾಗುತ್ತಿವೆ. ಈ ಬದಲಾವಣೆಗಳ ಬಗ್ಗೆ ಅರಿವು ಹೊಂದುವುದು ಅಗತ್ಯ. ಸಹಕಾರಿ ಕ್ಷೇತ್ರದ ಬೈಲಾ, ಕಾಯಿದೆ ಹಾಗೂ ಸರ್ಕಾರದ ಆದೇಶಗಳಿಗೆ ಅನುಗುಣವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಸಂಸ್ಥೆಗಳನ್ನು ಮುನ್ನಡೆಸಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.
PublicNext
04/11/2026 09:35 pm