ಬೆಳಗಾವಿ: ಕಬ್ಬಿನ ದರ ನಿಗದಿ ವಿಚಾರವಾಗಿ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಕೊನೆಗೂ ತಾತ್ಕಾಲಿಕ ತೆರೆ ಬಿದ್ದಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ಟನ್ ಕಬ್ಬಿಗೆ ₹3,600 ದರ ನೀಡಲು ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಕೊಂಡಿದ್ದಾರೆ. ರೈತ ಮುಖಂಡರು ಕೂಡ ಈ ದರಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬುಧವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನ್ನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರೂಜಿ ಸೇರಿದಂತೆ ರೈತ ಮುಖಂಡರು ₹3,600 ದರಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.
ಮೊದಲು ಸಕ್ಕರೆ ಕಾರ್ಖಾನೆಗಳು ಆರಂಭವಾಗಲು ಎಲ್ಲ ರೈತ ಮುಖಂಡರು ಸಹಕಾರ ನೀಡಬೇಕು. ಕಾರ್ಖಾನೆಗಳು ಆರಂಭವಾದ ಬಳಿಕ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸಬಹುದು. ಸದ್ಯ ಕಾರ್ಖಾನೆಗಳ ಆರಂಭಕ್ಕೆ ಅವಕಾಶ ಮಾಡಿಕೊಡುವುದು ಮುಖ್ಯವಾಗಿದೆ ಎಂದು ಮನವಿ ಮಾಡಿದರು.
ಅಲ್ಲದೆ, ಗುರುವಾರ ರೈತರು ಹಮ್ಮಿಕೊಂಡಿರುವ ಜೈಲ್ ಭರೋ ಕಾರ್ಯಕ್ರಮವನ್ನು ಕೈಬಿಡಬೇಕು. ಎಲ್ಲ ಮುಖಂಡರು ಕಾರ್ಖಾನೆಗಳ ಆರಂಭಕ್ಕೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.
₹3,600 ದರ ಕೇವಲ ಬೆಳಗಾವಿ ಜಿಲ್ಲೆಗೆ ಮಾತ್ರ ಅನ್ವಯವಾಗಲಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೇರೆ ಬೇರೆ ದರ ನಿಗದಿಯಾಗಲಿದೆ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
PublicNext
04/11/2026 10:29 pm
LOADING...