ಮಂಗಳೂರು : ನಗರದಲ್ಲಿ ನಿಷೇಧಿತ ಮಾದಕವಸ್ತು ಎಲ್ಎಸ್ಡಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹3 ಲಕ್ಷ ಮೌಲ್ಯದ 100 ಎಲ್ಎಸ್ಡಿ ಡ್ರಗ್ಸ್ ಸ್ಟ್ರಿಪ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನ ಅಳಪೆ, ಪಡೀಲ್ ನಿವಾಸಿ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30) ಹಾಗೂ ಉರ್ವ ಸ್ಟೋರ್, ದಡ್ಡಲ್ಕಾಡ್ ನಿವಾಸಿ ಸಿದ್ದಾರ್ಥ ಶೆಟ್ಟಿ (35) ಬಂಧಿತ ಆರೋಪಿಗಳು.
ಆರೋಪಿಗಳು ಬೆಂಗಳೂರಿನಿಂದ ನಿಷೇಧಿತ ಮಾದಕವಸ್ತು ಎಲ್ಎಸ್ಡಿ ಸ್ಟ್ರಿಪ್ಗಳನ್ನು ಖರೀದಿಸಿ, ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ನ.3ರಂದು ಮಧ್ಯಾಹ್ನ ಮಂಗಳೂರಿನ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು ₹3 ಲಕ್ಷ ಮೌಲ್ಯದ 100 ಎಲ್ಎಸ್ಡಿ ಡ್ರಗ್ಸ್ ಸ್ಟ್ರಿಪ್ಗಳು ಹಾಗೂ ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹3.35 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ ವಿರುದ್ಧ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿದೆ. ಮತ್ತೊಬ್ಬ ಆರೋಪಿ ಸಿದ್ದಾರ್ಥ ಶೆಟ್ಟಿ ವಿರುದ್ಧ ಮಂಗಳೂರು ನಗರದ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ ಹಾಗೂ ಗಾಂಜಾ ಮಾರಾಟ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಾದಕವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
PublicNext
05/11/2026 08:41 am