ಮೂಡಲಗಿ (ಬೆಳಗಾವಿ) : ರೈತ ಹೋರಾಟಗಾರ ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜೇರಿ ಸೇರಿದಂತೆ ರೈತ ಮುಖಂಡರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ, ಮೂಡಲಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ರೈತರು ಸ್ವಯಂಪ್ರೇರಿತವಾಗಿ ಬಂದ್ ಆಚರಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತ ಮುಖಂಡರ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಆಕ್ರೋಶಗೊಂಡ ರೈತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ, ವ್ಯಾಪಾರ ವಹಿವಾಟು ಸ್ಥಗಿತಗೊಳಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿಯೂ ಸ್ವಯಂಪ್ರೇರಿತ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲವೆಡೆ ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ರೈತ ಮುಖಂಡರ ಬಂಧನವನ್ನು ತೀವ್ರವಾಗಿ ಖಂಡಿಸಿದರು.
ರೈತರ ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಉದ್ದೇಶದಿಂದ ಮುಖಂಡರನ್ನು ಬಂಧಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಬಂಧಿತ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.
ರೈತ ಮುಖಂಡರ ಬಂಧನದ ಹಿನ್ನೆಲೆಯಲ್ಲಿ ಮೂಡಲಗಿ ತಾಲೂಕಿನಲ್ಲಿ ರೈತರ ಆಕ್ರೋಶ ಹೆಚ್ಚಾಗಿದ್ದು, ಪ್ರತಿಭಟನೆಯ ಕಾವು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
PublicNext
05/11/2026 02:50 pm
LOADING...